ಉಡುಪಿ:ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಂಕಿತ ಕಾಲರಾ ರೋಗ, 200ಕ್ಕೂ ಅಧಿಕ ಸಂಖ್ಯೆಯಲ್ಲಿ ಅಸ್ವಸ್ಥಗೊಂಡ ಜನರು
Wednesday, October 16, 2024
ಉಪ್ಪುಂದ: ಉಪ್ಪುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೆಡಿಕಲ್ ಮತ್ತು ಕರ್ಕಿಕಳಿ ಭಾಗದಲ್ಲಿ ಶಂಕಿತ ಕಾಲರಾ ರೋಗ ಕಾಣಿಸಿಕೊಂಡು 200ಕ್ಕೂ ಅಧಿಕ ಜನರು ಅಸ್ವಸ್ಥಗೊಂಡ ಕಾರಣ ತಹಶೀಲ್ದಾರ್ ಪ್ರದೀಪ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಗ್ರಾಮ ಪಂಚಾಯತ್‌ನಿಂದ ಸರಬರಾಜಾಗುತ್ತಿರುವ ಕುಡಿಯುವ ನೀರಿನಿಂದ ಈ ರೋಗ ಕಾಣಿಸಿಕೊಂಡಿದೆ ಎಂದು ಜನರು ಅನುಮಾನ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಆ ನೀರಿನ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿ, ಅದರ ವರದಿ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು. ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭಾರತಿ, ತಾಲೂಕು ವೈದ್ಯಾಧಿಕಾರಿ ಡಾ| ರಾಜೇಶ್ ಮತ್ತಿತರರಿದ್ದರು.
ನೀರಿನಿಂದ ಸಮಸ್ಯೆ
ಆರೋಗ್ಯ ಅಧಿಕಾರಿಗಳ ಪ್ರಕಾರ ಪ್ರಾರಂಭದಲ್ಲಿ ನೀರಿನಿಂದ ಆರೋಗ್ಯ ಸಮಸ್ಯೆ ಜನರಲ್ಲಿ ಕಾಣಸಿಕೊಂಡಿದ್ದು, ಬಳಿಕ ವ್ಯಕ್ತಿಯಿಂದ ವ್ಯಕ್ತಿಗೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಸುಮಾರು 145 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು, ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಹಾಗೂ ಬೈಂದೂರಿನಲ್ಲಿ ತಲಾ ಮೂವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೆಲವರು ಖಾಸಗಿ ಆಸ್ಪತ್ರೆಗಳಲ್ಲಿ ಹಾಗೂ ಮತ್ತೆ ಕೆಲವರು ಮನೆಯಲ್ಲೇ ಸ್ವಯಂಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಯಾವುದೇ ಗಂಭೀರ ಪ್ರಕರಣ ಇಲ್ಲವೆಂದು ತಿಳಿದುಬಂದಿದೆ.