ಮಂಗಳೂರು : ಜನತಾ ದರ್ಶನ ಸಭೆಗೆ ಗೈರು ; ಗಣಿ ಇಲಾಖೆಯ ಹಿರಿಯ ಅಧಿಕಾರಿ ಕೃಷ್ಣವೇಣಿ ವಿರುದ್ಧ ಕ್ರಮಕ್ಕೆ ಉಸ್ತುವಾರಿ ಸಚಿವ ಗುಂಡೂರಾವ್ ಸೂಚನೆ.
ಮಂಗಳೂರು, ಫೆ.8: ಬಂಟ್ವಾಳದಲ್ಲಿ ಫೆ.5 ರಂದು ನಡೆದ ಜನತಾ ದರ್ಶನ ಕಾರ್ಯಕ್ರಮಕ್ಕೆ ಗೈರು ಹಾಜರಾದ ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಜನತಾ ದರ್ಶನದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸಂಬಂಧಿಸಿದಂತೆ ಸಾವ೯ಜನಿಕರಿಂದ ದೂರುಗಳು ಬಂದಿದ್ದವು. ಈ ಬಗ್ಗೆ ಸ್ಪಂದಿಸಲು ಗಣಿ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿ ಉಪಸ್ಥಿತಿ ಇರಲಿಲ್ಲ. ಸಚಿವರ ಅಥವಾ ಜಿಲ್ಲಾಧಿಕಾರಿಯಿಂದ ಪೂರ್ವಾನುಮತಿ ಪಡೆಯದೆ ಸಭೆಗೆ ಗೈರು ಹಾಜರಾಗಿದ್ದರು.
ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಯ ವಿರುದ್ಧ ಶಿಸ್ತುಕ್ರಮಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ಗುಂಡೂರಾವ್ ದ.ಕ. ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಕೃಷ್ಣವೇಣಿ ದಕ್ಷಿಣ ಕನ್ನಡ ಜಿಲ್ಲಾ ಗಣಿ ಇಲಾಖೆಯ ಜಿಲ್ಲಾ ಮಟ್ಟದ ಹಿರಿಯ ಶ್ರೇಣಿ ಅಧಿಕಾರಿಯಾಗಿದ್ದು ಸಚಿವರ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಕೃಷ್ಣವೇಣಿ ಬಗ್ಗೆ ಭ್ರಷ್ಟಾಚಾರದ ಆರೋಪಗಳಿದ್ದು ಇತ್ತೀಚೆಗೆ ಲೋಕಾಯುಕ್ತ ದಾಳಿ ಮಾಡಿ ಕೋಟ್ಯಂತರ ರೂಪಾಯಿ ಆಸ್ತಿ ಜಪ್ತಿ ಮಾಡಿತ್ತು. ಈ ಹಿಂದೆ ಬೆಂಗಳೂರಿನಲ್ಲಿ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಬಹಳಷ್ಟು ಆಸ್ತಿ ಮಾಡಿಕೊಂಡ ಆರೋಪಗಳಿವೆ. ಇವರು ಮಂಗಳೂರಿಗೆ ಬಂದ ಬಳಿಕ ದಕ್ಷಿಣ ಕನ್ನಡ ಗಣಿ ಇಲಾಖೆಯನ್ನೂ ಹಿಂಬಡ್ತಿಗೆ ಸರಿಸಲಾಗಿದೆ. ಜಿಲ್ಲಾ ಉಪ ನಿರ್ದೇಶಕರು ಹುದ್ದೆಯನ್ನು ತೆರವು ಮಾಡಿ ಆ ಹುದ್ದೆಯಲ್ಲಿದ್ದ ಕೃಷ್ಣವೇಣಿ ಅವರನ್ನು ಹಿರಿಯ ಅಧಿಕಾರಿಯಾಗಿ ಮಂಗಳೂರಿನಲ್ಲೇ ಉಳಿಸಿಕೊಳ್ಳಲಾಗಿದೆ.