ದೊಡ್ಡ ಬಳ್ಳಾಪುರ :SSLC ಪರೀಕ್ಷಾ ಕೇಂದ್ರಕ್ಕೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾ ನಾಶಪಡಿಸಿದ ಕಿಡಿಗೇಡಿಗಳು
ದೊಡ್ಡಬಳ್ಳಾಪುರ(ಬೆಂ.ಗ್ರಾಮಾಂತರ): ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಕ್ಕೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಕಿಡಿಗೇಡಿಗಳು ನಾಶಪಡಿಸಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯ ಸರ್ಕಾರಿ ಪ್ರೌಢಶಾಲೆಯನ್ನು SSLC ಪರೀಕ್ಷಾ ಕೇಂದ್ರವನ್ನಾಗಿ ಗುರುತಿಸಿ ಸಕಲ ಸಿದ್ಧತೆ ನಡೆಸಲಾಗಿತ್ತು. ಇಂದು ನಿಗದಿಯಂತೆ ಪರೀಕ್ಷೆ ಸುಸೂತ್ರವಾಗಿ ನಡೆಸಲು ತಯಾರಿ ಮಾಡಲಾಗಿತ್ತು. ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಗೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಆದರೆ ಕಳೆದ ರಾತ್ರಿ ಕಿಡಿಗೇಡಿಗಳು ಪರೀಕ್ಷಾ ಕೇಂದ್ರಕ್ಕೆ ಬಂದು ಗೇಟ್, ಕೊಠಡಿಗಳ ಬಾಗಿಲು ಮುರಿದು, ಕೊಠಡಿಗಳಿಗೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಕಿತ್ತು ಮತ್ತೆ ಜೋಡಿಸಿದ್ದಾರೆ. 10 ಕೊಠಡಿಗಳಲ್ಲಿದ್ದ 14 ಕ್ಯಾಮೆರಾಗಳ ಪೈಕಿ 6 ಕ್ಯಾಮೆರಾಗಳನ್ನು ಕಿತ್ತೆಸೆದಿದ್ದಾರೆ.
ಪೊಲೀಸರು ಹಾಗೂ ಅಧಿಕಾರಿಗಳು ಪರೀಕ್ಷಾ ಕೇಂದ್ರಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ, ನಾಶಪಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಮತ್ತೆ ಜೋಡಿಸಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುವು ಮಾಡಿಕೊಟ್ಟಿದ್ದಾರೆ.