ಉಪ್ಪಿನಂಗಡಿ : ನೀರಕಟ್ಟೆ ತಿರುವಿನಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ ; ಬೆಂಗಳೂರಿನ ಯುವಕ ಸಾವು; 12 ಮಂದಿಗೆ ಗಾಯ.

ಪುತ್ತೂರು : ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಸ್ಲೀಪರ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಘಟನೆ ಕಡಬ ತಾಲೂಕಿನ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ನಡೆದಿದ್ದು ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟು 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಬೆಂಗಳೂರಿನಿಂದ ರಾತ್ರಿ ಹೊರಟಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್, ಇಂದು ಮುಂಜಾನೆ ಉಪ್ಪಿನಂಗಡಿ ಮಾರ್ಗವಾಗಿ ಮಂಗಳೂರಿಗೆ ಬರುತ್ತಿತ್ತು. ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಬರುತ್ತಿದ್ದಂತೆ ಚಾಲಕನಿಗೆ ವಾಹನ ನಿಯಂತ್ರಣ ಕಳೆದುಕೊಂಡಿದ್ದು ತಿರುವಿನಲ್ಲಿ ಬಸ್ ರಸ್ತೆ ಬದಿಗೆ ಉರುಳಿ ಬಿದ್ದಿದೆ.



ಮೃತರನ್ನು ಬೆಂಗಳೂರು ಯಡಿಯೂರು ನಿವಾಸಿ ಹರ್ಷ (24) ಎಂದು ಗುರುತಿಸಲಾಗಿದೆ. ಇವರು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಮುಲ್ಕಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗಾಯಗೊಂಡ 12 ಮಂದಿಯಲ್ಲಿ 11 ಜನರು ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವನನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತದಿಂದಾಗಿ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಕ್ರೇನ್ ಸಹಾಯದಿಂದ ಬಸ್ಸನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಲಾಯಿತು.