ಬೆಂಗಳೂರು :ರಾಜ್ಯ ಸರ್ಕಾರದಿಂದ ಯುಗಾದಿಗೆ ಬೆಲೆ ಏರಿಕೆ ಕೊಡುಗೆ ; ಏ.2ರಿಂದ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ, ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ; ವಿಜಯೇಂದ್ರ ಘೋಷಣೆ

ಬೆಂಗಳೂರು :ರಾಜ್ಯ ಸರ್ಕಾರದಿಂದ ಯುಗಾದಿಗೆ ಬೆಲೆ ಏರಿಕೆ ಕೊಡುಗೆ ; ಏ.2ರಿಂದ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ, ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ; ವಿಜಯೇಂದ್ರ ಘೋಷಣೆ


ಬೆಂಗಳೂರು: ಜನತೆಗೆ ಬೆಲೆ ಏರಿಕೆ ಬರೆ ಹಾಕಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಏ.2ರಿಂದ ಜನಾಕ್ರೋಶ ಯಾತ್ರೆ ನಡೆಸಲಾಗುತ್ತಿದ್ದು, ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. 

ಸುದ್ದಿಗಾರರ ಜತೆ ಮಾತನಾಡಿ, ಏ.2ರಂದು ಫ್ರೀಡಂಪಾರ್ಕ್‌ನಲ್ಲಿ ಬೆಲೆ ಏರಿಕೆ ವಿರುದ್ಧ ಬೆಳಗ್ಗೆಯಿಂದ ರಾತ್ರಿ ವರೆಗೂ ಧರಣಿ ನಡೆಸಲಾಗುವುದು. ಅಂದು ಅಹೋರಾತ್ರಿ ಧರಣಿ ನಡೆಸಲು ತೀರ್ಮಾನಿಸಲಾಗಿದೆ. ಬಿಜೆಪಿಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು, ಜಿಲ್ಲಾ ಅಧ್ಯಕ್ಷರು, ರಾಜ್ಯದ ಎಲ್ಲ ಪದಾಧಿಕಾರಿಗಳು ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. 

ಎ.4ರಂದು ಎಲ್ಲ ಕಡೆಯ ಜಿಲ್ಲಾ ಕೇಂದ್ರಗಳಲ್ಲಿ ಮತ್ತು ಏ.5ರಂದು ಎಲ್ಲ ಮಂಡಲಗಳಲ್ಲಿ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ಮಾಡಲಿದ್ದೇವೆ. ಪಕ್ಷದ ಎಲ್ಲ ಮುಖಂಡರು ಕುಳಿತು ಅನೇಕ ವಿಚಾರಗಳನ್ನು ಚರ್ಚಿಸಿದ್ದೇವೆ. ವಿಶೇಷವಾಗಿ ರಾಜ್ಯ ಸರ್ಕಾರವು ಜನರಿಗೆ ಬೆಲೆ ಏರಿಕೆಯ ಗ್ಯಾರಂಟಿ ನೀಡಿದೆ. ನೀರಿನ ದರ, ಪೆಟ್ರೋಲ್ ದರ ಹೆಚ್ಚಳ ಮಾಡಲಾಗಿದೆ. ಹಾಲಿನ ದರವನ್ನು ಮೂರನೇ ಬಾರಿಗೆ ಏರಿಕೆ ಮಾಡಲಾಗಿದೆ. ವಿದ್ಯುತ್‌ ದರವನ್ನೂ ಹೆಚ್ಚಿಸಲಾಗಿದೆ. ಬೆಲೆ ಏರಿಕೆ ಜನರಿಗೆ ಯುಗಾದಿ ಕೊಡುಗೆಯಂತಿದೆ ಎಂದು ವ್ಯಂಗ್ಯವಾಡಿದರು.

ಬೆಲೆ ಏರಿಕೆ ಮಾಡಿದ ಸರ್ಕಾರದ ವಿರುದ್ಧ ಜನಾಂದೋಲನ ಮಾಡಲಿದ್ದೇವೆ. ಜನರಲ್ಲಿ ಜಾಗೃತಿ ಮೂಡಿಸಲು ಸರ್ಕಾರದ ವಿರುದ್ಧ ಹೋರಾಟ ಮಾಡಲು ತೀರ್ಮಾನಿಸಲಾಗಿದೆ. ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರವು ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡಿದ್ದು, ಇದು ಒಂದು ಕಣ್ಣಿಗೆ ಸುಣ್ಣ, ಇನ್ನೊಂದು ಕಣ್ಣಿಗೆ ಬೆಣ್ಣೆಯಂತಿದೆ. ಹಿಂದೂಗಳಿಗೆ ಮಾಡಿದ ಈ ಅವಮಾನದ ವಿರುದ್ಧ ಜನಜಾಗೃತಿ ಮೂಡಿಸುತ್ತೇವೆ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಿಗೆ ಪ್ರವಾಸ ಮಾಡುತ್ತೇವೆ ಎಂದು ತಿಳಿಸಿದರು.

Ads on article

Advertise in articles 1

advertising articles 2

Advertise under the article